545 ಪಿಎಸ್ಐ ಹುದ್ದೆಗಳಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿಪಿ ಪ್ರವೀಣ್ ಸೂದ್ ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮರು ಪರೀಕ್ಷೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ.
545 ಪಿಎಸ್ಐ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ. ಈ ಮೊದಲು ನಡೆದ ಪರೀಕ್ಷೆಯನ್ನು ಗೃಹ ಇಲಾಖೆ ರದ್ದು ಮಾಡಿ ಆದೇಶ ಹೊರಡಿಸಿದೆ.
ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಸಿಐಡಿ ತನಿಖೆಯನ್ನು ಆರಂಭಿಸಿದ ನಂತರ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಕಿಂಗ್ಪಿನ್ಗಳನ್ನು ಸೇರಿದಂತೆ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ನಿನ್ನೆಯಷ್ಟೇ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡೆ ಎನ್ನಲಾದ ದಿವ್ಯ ಹಾಗರಗಿ ಸೇರಿದಂತೆ 5 ಜನರನ್ನು ಪೊಲೀಸರು ಬಂಧಿಸಿದ್ದರು. ಒಟ್ಟಾರೆಯಾಗಿ ಈ ಪ್ರಕರಣದಲ್ಲಿ 22 ಜನರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
545 ಪಿಎಸ್ಐ ಹುದ್ದೆಗಳಿಗೆ 54,289 ಜನ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದೀಗ ಎಲ್ಲರೂ ಮರು ಪರೀಕ್ಷೆಗೆ ಅರ್ಹರಾಗಿದ್ದಾರೆ. ಪಿಎಸ್ಐ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶವಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲು ಮರು ಪರೀಕ್ಷೆ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಆದರೆ, ನಿಷ್ಠಾವಂತ ಅಭ್ಯರ್ಥಿಗಳಿಗೆ ಸರ್ಕಾರದ ಈ ನಿರ್ಧಾರ ಕೊಡಲಿ ಪೆಟ್ಟನ್ನು ನೀಡಿದಂತಾಗಿದೆ.