ಅನೈತಿಕ ಪೊಲೀಸ್​ಗಿರಿ ಸಹಿಸಲ್ಲ – ಪೊಲೀಸ್​ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ವಿಧಾನಸೌಧದಲ್ಲಿ ಇವತ್ತು ಪೊಲೀಸ್​ ಇಲಾಖೆಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು.

ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು.
ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು.
ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.
ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ಪೊಲೀಸ್​ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.