ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ.ಕೃಷ್ಣ ಅವರ ನಂತರ ನಾನು ಪಕ್ಷದ ಅಧ್ಯಕ್ಷನಾಗಿದ್ದು, ಒಕ್ಕಲಿಗ ಸಮಾಜ ನನ್ನ ಬೆನ್ನ ಹಿಂದೆ ನಿಲ್ಲಬೇಕು ಎಂದು ಮನವಿ ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಪತ್ರಕರ್ತರು, ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ತಾವು ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದೀರಾ ಎಂದು ಪ್ರಶ್ನಿಸಿದಾಗ ಅವರು ಉತ್ತರಿಸಿದರು.
ನಾನೇನು ಸನ್ಯಾಸಿನಾ? ನಾನು ಖಾದಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ ಹೊರತು, ಕಾವಿ ಬಟ್ಟೆ ಹಾಕಿ ಬಂದಿಲ್ಲ. ಆದರೆ, ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಪಕ್ಷ ತೀರ್ಮಾನ ಮಾಡಲಿದೆ. ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದೇ ನನಗೆ ಮುಖ್ಯ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.
ಈ ಸಮಯದಲ್ಲಿ ನಿಮ್ಮ ಸಮುದಾಯ ನಿಮ್ಮ ಜತೆ ನಿಲ್ಲುವುದೇ ಎಂಬ ಪ್ರಶ್ನೆಗೆ, ಕೇವಲ ಒಂದು ಸಮುದಾಯವಲ್ಲ, ರಾಜ್ಯದ ಎಲ್ಲ ಸಮುದಾಯಗಳು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನಮ್ಮ ಬೆಂಬಲಕ್ಕೆ ನಿಲ್ಲಬೇಕು. ನಾವು ಜಾತ್ಯಾತೀತ ತತ್ವದಲ್ಲಿ ನಡೆದುಕೊಂಡು ಬಂದಿದ್ದು, ಒಂದು ಜಾತಿ ಹಾಗೂ ಧರ್ಮಕ್ಕೆ ನಾಯಕನಲ್ಲ. ಕಾಂಗ್ರೆಸ್ ನಾಯಕ ಎಂದು ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.