IAS vs IPS: ಸಿಂಧೂರಿ ಮಾನಹಾನಿ ಕೇಸ್​- ಹೈಕೋರ್ಟ್ ಮೊರೆ ಹೋದ ಡಿ ರೂಪಾ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್‌ ಮಾನಹಾನಿ ಕೇಸ್ ವಜಾ ಮಾಡುವಂತೆ ಕೋರಿ ಐಪಿಎಸ್‌ ಅಧಿಕಾರಿ ಡಿ ರೂಪಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಡಿ ರೂಪಾ ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ  ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ನಿನ್ನೆ ನಿಗದಿಯಾಗಿತ್ತು.

ಈ ಹಂತದಲ್ಲಿ ಪ್ರಕರಣದ ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಈ ಹಿಂದೆ ವಕೀಲನಾಗಿ ತಾವು ರೋಹಿಣಿ ಸಿಂಧೂರಿ ಅವರನ್ನು ಬೇರೊಂದು ಪ್ರಕರಣದಲ್ಲಿ ಪ್ರತಿನಿಧಿಸಿರುವುದರಿಂದ ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ ಎಂದು ಹಿಂದೆ ಸರಿದರು. 

2023ರ ಮಾರ್ಚ್‌ 24ರಂದು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯ ಅರ್ಜಿ ಪರಿಗಣಿಸಿದ್ದ ಬೆಂಗಳೂರು ಕೋರ್ಟ್ ಐಪಿಎಸ್‌ ಅಧಿಕಾರಿ ಡಿ ರೂಪಾ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು. ಅಲ್ಲದೇ, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು.

ಈಗ ಇದನ್ನು ವಜಾ ಮಾಡಬೇಕು ಎಂದು ಡಿ ರೂಪಾ ಕೋರಿದ್ದಾರೆ. ಅಲ್ಲದೇ, 2023ರ ಮಾರ್ಚ್‌ 4ರಂದು ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಮಾಡಿರುವ ಆದೇಶವನ್ನು ಬದಿಗೆ ಸರಿಸಬೇಕು. ರೋಹಿಣಿ ಸಿಂಧೂರಿ ದಾಖಲಿಸಿರುವ ಖಾಸಗಿ ದೂರು ಹಾಗೂ ಕೋರ್ಟ್​ನಲ್ಲಿ ಬಾಕಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಡಿ ರೂಪಾ ಕೋರಿದ್ದಾರೆ.

ಪ್ರಕರಣ ಏನು?

2023ರ ಫೆಬ್ರವರಿ 18 ಮತ್ತು 19ರಂದು ಡಿ ರೂಪಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪಗಳನ್ನು ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು