ಬೆಂಗಳೂರು: ಬಿಜೆಪಿ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಗೂಂಡಾಗಳ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಭಾರತ್ ಜೋಡೋ ನ್ಯಾಯ ಯಾತ್ರೆಯ ಮೇಲೆ ನಡೆದಿರುವ ದಾಳಿ ಖಂಡಿಸಿ ಇಂದು ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾತನಾಡಿದ ಡಿಕೆ ಶಿವಕುಮಾರ್, ಧರ್ಮದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ ಎಂದು ಗುಡುಗಿದರು.
ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.