ADVERTISEMENT
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.
ಸಿಬಿಐ ತನಿಖೆಗೆ ಕಾನೂನು ಪ್ರಕಾರ ಅನುಮತಿ ನೀಡಲಾಗಿಲ್ಲ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲು ತೀರ್ಮಾನಿಸಲಾಗಿದೆ.
ತಮ್ಮದೇ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ನಿರ್ಧಾರ ಕೈಗೊಳ್ಳುತ್ತಿರುವ ಕಾರಣ ಉಪ ಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ಸಂಪುಟ ಸಭೆಗೆ ಗೈರಾಗಿದ್ದರು.
೭೪ ಕೋಟಿ ರೂಪಾಯಿ ಮೊತ್ತದಷ್ಟು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಡಿ ಜಾರಿ ನಿರ್ದೇಶನಾಲಯದ ಆರೋಪಪಟ್ಟಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು.
ರಾಜ್ಯ ಸರ್ಕಾರದ ಒಪ್ಪಿಗೆ ಅನಿವಾರ್ಯ:
ದೆಹಲಿ ಪೊಲೀಸ್ ಸ್ಥಾಪನಾ ಕಾಯ್ದೆಯ ಪ್ರಕಾರ ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಅನಿವಾರ್ಯ. ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ೨೦೧೯ರಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ನೀಡಲಾಗಿತ್ತು.
ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಬಹುದು ಎಂದು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನೀಡಿರುವ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ.
ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಡಿಕೆಶಿ ಅವರು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಡಿಕೆಶಿ ಅರ್ಜಿ ವಜಾಗೊಳಿಸಿ ಸಿಬಿಐ ತನಿಖೆಗೆ ಅನುಮತಿಸಿತ್ತು.
ಆದರೆ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಕೆಶಿ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಸಿಬಿಐ ತನಿಖೆಗೆ ತಡೆ ನೀಡಿತ್ತು.
ನವೆಂಬರ್ ೨೯ರಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿರುವ ಹೊತ್ತಲ್ಲೇ ಕಾಂಗ್ರೆಸ್ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆದಿದೆ.
ತನಿಖೆ ಬಹುತೇಕ ಮುಗಿದಿದೆ ಎಂದಿರುವ ಸಿಬಿಐ:
ಸುಪ್ರೀಂಕೋರ್ಟ್ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆಯ ಪ್ರಕರಣದ ತನಿಖೆಗೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ ಎಂದು ಸಿಬಿಐ ಹೇಳಿತ್ತು.
ADVERTISEMENT