ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ೧೧ನೇ ಆರೋಪಿಯಾಗಿರುವ ಮೋಹನ್ ನಾಯಕ್ ಎನ್ಗೆ ಜಾಮೀನು ನೀಡಿದೆ.
ಆರೋಪಿಯ ಲೋಪವಿಲ್ಲದೇ ಗೌರಿ ಹತ್ಯೆ ಪ್ರಕರಣದ ವಿಚಾರಣೆ ವಿಳಂಬವಾಗಿದೆ ಮತ್ತು ವಿಚಾರಣೆ ಶೀಘ್ರ ಮುಗಿಯುವ ಲಕ್ಷಣಗಳಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಜಾಮೀನು ಮಂಜೂರು ಮಾಡಿದೆ.
ಆರೋಪಟ್ಟಿಯಲ್ಲಿ 527 ಮಂದಿಯನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ. ಆದರೆ ಇಲ್ಲಿಯವರೆಗೆ ಎರಡು ವರ್ಷದಲ್ಲಿ ಕೇವಲ 90 ಸಾಕ್ಷಿಗಳನ್ನಷ್ಟೇ ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯನ್ನು ತೀವ್ರಗತಿಯಲ್ಲಿ ನಡೆಸುವಂತೆ ವಿಚಾರಣಾ ನ್ಯಾಯಾಲಯಕ್ಕೆ 2019ರ ಫೆಬ್ರವರಿಯಲ್ಲಿ ಹೈಕೋರ್ಟ್ ಆದೇಶಿಸಿದ್ದರೂ ವಿಚಾರಣೆ ವಿಳಂವವಾಗಿದೆ ಮತ್ತು ಆರೋಪಿ 2018ರ ಜುಲೈ 18ರಿಂದ ಜೈಲಿನಲ್ಲೇ ಇದ್ದಾರೆ ಎಂದು ಹೈಕೋರ್ಟ್ ಹೇಳಿದೆ.
ವಿಚಾರಣೆ ವಿಳಂಬದ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೆಳ ಹಂತದ ನ್ಯಾಯಾಲಯಕ್ಕೆ 51 ವರ್ಷದ ಮೋಹನ್ ನಾಯಕ್ ಅರ್ಜಿ ಸಲ್ಲಿಸಿದ್ದ. ಆದರೆ ಆ ಅರ್ಜಿಯನ್ನು ಜುಲೈ ೬ರಂದು ಕೋರ್ಟ್ ವಜಾಗೊಳಿಸಿತ್ತು. ಕೆಳಹಂತದ ನ್ಯಾಯಾಲಯದ ಆದೇಶದ ವಿರುದ್ಧ ನಾಯಕ್ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.