ಗುಜರಾತ್ ನ ‘ಗೋದ್ರಾ ಗಲಭೆ’ಗೆ ಸಂಬಂಧಿಸಿದಂತೆ ಅಂದಿನ ಗುಜರಾತ್ ಮುಖ್ಯಮಂತ್ರಿ ಹಾಗೂ ಇಂದಿನ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಗೊಂಡಂತೆ 64 ಮಂದಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ತಿರಸ್ಕರಿದೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ಲೀನ್ ಚಿಟ್ ನೀಡಿದೆ.
‘ಗೋದ್ರಾ ಗಲಭೆ’ಗೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ವಿಚಾರಣೆ ನಡೆಸಿದ ಎಸ್ಐಟಿ ಸಿಎಂ ಆಗಿದ್ದ ನರೇಂದ್ರ ಮೋದಿ ಸೇರಿದಂತೆ ಇತರೆ 64 ಜನರ ಮೇಲಿನ ಪ್ರಕರಣಕ್ಕೆ ಕ್ಲೀನ್ ಚಿಟ್ ನೀಡಿತ್ತು. ಈ ವರದಿಗೆ ವಿರೋಧ ವ್ಯಕ್ತಪಡಿಸಿ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರು ತಿರಸ್ಕರಿಸಿದ್ದರು.
ಮೆಟ್ರೊಪಾಲಿಟಿನ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಜಾಫ್ರಿಯವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ, ವಿಶೇಷ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರ ತೀರ್ಪನ್ನು ಎತ್ತಿಹಿಡಿದಿದೆ. ಅಲ್ಲದೇ, ಜಾಫ್ರಿ ಅವರ ಅರ್ಜಿಯು ವಿಚಾರಣೆಗೆ ಅರ್ಹವಾಗಿಲ್ಲ ಎಂಬ ಗುಜರಾತ್ ಹೈಕೋರ್ಟ್ ತೀರ್ಪನ್ನೂ ಎತ್ತಿ ಹಿಡಿದಿದೆ.
2002ರ ಫೆಬ್ರುವರಿ 27ರಂದು ಗುಜರಾತ್ನ ಗೋದ್ರಾ ರೈಲ್ವೆ ನಿಲ್ದಾಣದ ಬಳಿ ಸಬರಾಮತಿ ಏಕ್ಸ್ಪ್ರೆಸ್ ರೈಲಿನ ಎಸ್–6 ಕೋಚ್ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವಿಗೀಡಾದ್ದರು. ಮರುದಿನ (ಫೆಬ್ರುವರಿ 28) ಅಹಮದಾಬಾದ್ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡದಲ್ಲಿ ಸಾವಿಗೀಡಾದ 68 ಜನರಲ್ಲಿ ಕಾಂಗ್ರೆಸ್ ಮಾಜಿ ಸಂಸದ ಎಹಸಾನ್ ಜಾಫ್ರಿ ಕೂಡಾ ಒಬ್ಬರಾಗಿದ್ದರು.
2002 ರಲ್ಲಿ ಗುಜರಾತ್ನಲ್ಲಿ ನಡೆದ ಗೋದ್ರಾ ಗಲಭೆಯಲ್ಲಿ 1 ಸಾವಿರ ಜನ ಸಾವನ್ನಪ್ಪಿದ್ದರು. 3 ದಿನ ನಡೆದ ಈ ಗಲಭೆಯಲ್ಲಿ ಮಡಿದವರು ಬಹುತೇಕರು ಮುಸ್ಲಿಮರಾಗಿದ್ದರು.