ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿದವರಿಂದ ರಾಜ್ಯ ಪಠ್ಯಪುಸ್ತಕಗಳ ಪುನರ್ ಪರಿಷ್ಕರಣೆಯಾಗಿದೆ. ಈ ಮರು ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪತ್ರದ ಸಾರಾಂಶ :
ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ನೇಮಕ ಮಾಡಿರುವ ಸಮಿತಿಯ ಅಧ್ಯಕ್ಷ (ರೋಹಿತ್ ಚಕ್ರತೀರ್ಥ) ಅವರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿದ್ದಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಕುವೆಂಪು ಅವರಿಗೆ ಮಾಡಿದ ದೊಡ್ಡ ಅವಮಾನವೇ ಸರಿ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು.
ಪುನರ್ ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. ಸಿದ್ಧಗಂಗಾ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆದುಹಾಕಲಾಗಿದೆ. ಅಂಬೇಡ್ಕರ್ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ದಾರ್ಶನಿಕ ಸಂತರ ಪಠ್ಯಗಳನ್ನೇ ಕೈಬಿಡಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಿದ್ದಾರೆ. ಸಮಿತಿಯ ಈ ನಿರ್ಧಾರವನ್ನು ನಾನು ಖಂಡಿಸುತ್ತೇನೆ.
ಪತ್ರೇಕ ಪುಟಗಳ ಮುದ್ರಣದಿಂದ ಅಸಂಖ್ಯಾತ ದೋಷ ಸರಿಪಡಿಸಲು ಸಾಧ್ಯವಿಲ್ಲ. ಆದ್ದರಿಂದ, ಈ ವರ್ಷಕ್ಕಾಗಿ ಈ ಹಿಂದೆ ಇದ್ದ ಬರಗೂರು ನೇತೃತ್ವದ ಸಮಿತಿ ಪರಿಷ್ಕರಣೆಯ ಪುಸ್ತಕಗಳನ್ನೇ ಬಳಸಬೇಕು ಎಂದು ದೇವೇಗೌಡರು ಸಿಎಂಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.
ಕುವೆಂಪು ಹೋರಾಟ ಸಮಿತಿ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಿ ಸರ್ಕಾರಕ್ಕೆ ಹಕ್ಕೋತ್ತಾಯ ಪತ್ರ ಕಳುಹಿಸಿತ್ತು. ಈ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತೇನೆ ಎಂದು ಹೆಚ್ಡಿ ದೇವೇಗೌಡ ಹೇಳಿದ್ದಾರೆ.