ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ಕೊಡುವುದು ಕಡ್ಡಾಯ ಎಂದಿರುವ ಕರ್ನಾಟಕ ಹೈಕೋರ್ಟ್, ಈ ಸಂಬಂಧ ಕ್ರಿಮಿನಲ್ ಹಿನ್ನೆಲೆ ಘೋಷಣೆಗೆ ಅಗತ್ಯವಾದ ಅರ್ಜಿ ನಮೂನೆಯನ್ನು ಚುನಾವಣೆ ವೇಳೆ ವಿತರಿಸುವಂತೆ ಮತ್ತು ಆ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗುವಂತೆ ಕ್ರಮಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆಯೋಗಕ್ಕೆ ಸೂಚಿಸಿದೆ.
ಶಿವಮೊಗ್ಗ ಜಿಲ್ಲೆಯ ಹರಿದಾವತಿ ಗ್ರಾಮ ಪಂಚಾಯತ್ ಸದಸ್ಯ ಹೆಚ್ ವಿ ಅಶೋಕ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನಾಮಪತ್ರ ಸಲ್ಲಿಕೆ ವೇಳೆ ಕ್ರಿಮಿನಲ್ ಹಿನ್ನೆಲೆಯನ್ನು ಘೋಷಿಸಿಕೊಂಡಿಲ್ಲ ಎಂಬ ಕಾರಣಕ್ಕಾಗಿ ೨೦೨೧ರಲ್ಲಿ ಶಿವಮೊಗ್ಗದ ನ್ಯಾಯಾಲಯ ಅಶೋಕ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಅಶೋಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ಇದೇ ಆಗಸ್ಟ್‌ನಲ್ಲಿ ಸಿವಿಲ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಅಶೋಕ್ ಅವರು ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
೨೦೦೩ರಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪ್ರಕಾರ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ಘೋಷಿಸಿಕೊಳ್ಳಬೇಕು ಮತ್ತು ಆ ಮಾಹಿತಿಯನ್ನು ಮಾಧ್ಯಮಗಳ ಮೂಲಕ ಜನರಿಗೆ ತಿಳಿಸುವುದು ಕಡ್ಡಾಯ.
ADVERTISEMENT
ADVERTISEMENT