ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ತಿಳಿಸಿದರು.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಬ್ಬರು ನಾಯಕರ ಉಚ್ಛಾಟನೆ ನಿರ್ಧಾರವನ್ನು ಪ್ರಕಟಿಸಿದರು.
ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದು ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಮಂಡ್ಯ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು, ಇಬ್ರಾಹಿಂ ಅವರನ್ನು ಹಾಗೂ ಪಶ್ಚಿಮ ಬಂಗಾಳ ಜೆಡಿಎಸ್ ಘಟಕದ ಅಧ್ಯಕ್ಷ ಪುನೀತ್ ಕುಮಾರ ಸಿಂಗ್ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ನಿರ್ಣಯವನ್ನು ಕಾರ್ಯಕಾರಿಣಿ ಸಭೆಯಲ್ಲಿ ಮಂಡನೆ ಮಾಡಿದ್ದರು.
ಈ ಇಬ್ಬರು ಮಂಡಿಸಿದ ನಿರ್ಣಯಗಳನ್ನು ಕಾರ್ಯಕಾರಿಣಿಯೂ ಸರ್ವಾನುಮತದಿಂದ ಅಂಗೀಕಾರ ಮಾಡಿತು.
ADVERTISEMENT
ADVERTISEMENT