ADVERTISEMENT
ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಪ್ರಧಾನಿ ಮೋದಿ ಸರ್ಕಾರಕ್ಕೆ ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಅತೀ ದೊಡ್ಡ ಗೆಲುವು ಸಿಕ್ಕಿದೆ.
ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಮೂರು ಪ್ರತ್ಯೇಕ ತೀರ್ಪುಗಳನ್ನು ಬರೆದಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
2019ರಲ್ಲಿ ಎರಡನೇ ಬಾರಿಗೆ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಸರ್ಕಾರ ಅದೇ ವರ್ಷದ ಆಗಸ್ಟ್ನಲ್ಲಿ ವಿಶೇಷ ಸ್ಥಾನಮಾನ ರದ್ದುಪಡಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿತ್ತು. ಈ ಮೂಲಕ 1949, ಅಕ್ಟೋಬರ್ 17ರಂದು ಸಂವಿಧಾನ ಸಭೆ ಮೂಲಕ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದಾಗಿತ್ತು.
ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿರುವುದು ಬಿಜೆಪಿಗೆ ಪ್ರಮುಖ ಶಕ್ತಿಯಾಗಲಿದೆ.
ADVERTISEMENT