ವಿಧಾನಸೌಧದ ಆವರಣದಲ್ಲಿ ‘ನಾಡಪ್ರಭು ಕೆಂಪೇಗೌಡರ’ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮುಂದಿನ ಕೆಂಪೇಗೌಡ ಜಯಂತಿಯ ಒಳಗಡೆ ವಿದಾನಸೌಧದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ. ವಿಧಾನಸೌಧ ಬೆಂಗಳೂರಿನಲ್ಲೇ ಇರುವುದರಿಂದ ಕೆಂಪೇಗೌಡರ ಪ್ರತಿಮೆ ಈ ಮೊದಲೇ ಸ್ಥಾಪನೆ ಆಗಬೇಕಿತ್ತು. ಆ ತಪ್ಪುಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು, ಮಾಜಿ ಸಿಎಂ ಎಸ್ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಈ ಮೂವರಿಗೆ 5 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.
ಈ ಮೊದಲು ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಾಣ ಮಾಡಲು ಕಡತ ಮಂಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದ್ದರು.