ಸಚಿವ ನಾಗೇಂದ್ರ ವಿರುದ್ಧದ ತನಿಖೆಗೆ ಹೈಕೋರ್ಟ್​ ತಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಸಚಿವ ನಾಗೇಂದ್ರ ಅವರ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸಮ್ಮತಿಸಿದೆ.

ಜುಲೈ 8ರಂದು ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸೂಚಿಸಿರುವ ಹೈಕೋರ್ಟ್​ ಸಚಿವ ನಾಗೇಂದ್ರ ಸಲ್ಲಿಸಿರುವ ಅರ್ಜಿ ಸಂಬಂಧ ಅಭಿಪ್ರಾಯ ತಿಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಅರ್ಜಿದಾರ ಸಚಿವ ನಾಗೇಂದ್ರ ವಾದವೇನು..?

ಆರೋಪಿಸಲಾಗಿರುವ ಕೃತ್ಯ ನಡೆದಿರುವುದು 2009 ಮತ್ತು 2010ರ ನಡುವೆ. ಆದರೆ ದೂರು ಸಲ್ಲಿಕೆ ಆಗಿರುವುದು 2023ರಲ್ಲಿ. ಹೀಗಾಗಿ ಈ ದೂರಿನ ಬಗ್ಗೆ ವಿಚಾರಣೆ ನಡೆಸುವುದು ಜನಪ್ರತಿನಿಧಿಗಳ ನ್ಯಾಯಾಲಯದ ವ್ಯಾಪ್ತಿಗೆ ಬರಲ್ಲ.

ಇದೇ ತಿಂಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಚಿವ ನಾಗೇಂದ್ರ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರೆ 10 ಮಂದಿ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧ ಕ್ರಿಮಿನಲ್​ ಪ್ರಕರಣ ದಾಖಲಿಸಲು ಸೂಚಿಸಿತ್ತು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರಾಜಧನ ಪಾವತಿಸದೇ ಮತ್ತು ಅನುಮತಿ ಪಡೆಯದೇ 22.82 ಮೆಟ್ರಿಕ್​ ಟನ್​ನ್ನಷ್ಟು ಕಬ್ಬಿಣದ ಅದಿರು ಮಾರಾಟ ಮಾಡಿದ ಆರೋಪ ಇದೆ.