ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ರ್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರ್ಕಾರದ ಒಂದು ವರ್ಷದ ಸಾಧನೆಯ ಸರ್ಕಾರಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ ಹಾಗೂ ಪಕ್ಷದ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸಚಿವ ಸಂಪುಟದ ಎಲ್ಲ ಸಚಿವರು ಚಿಂತನಾ ಸಭೆ ಮಾಡಿದ್ದೇವೆ. ಸಭೆಯಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯವಾಗಿ ಮುಂದೆ ಹೋಗಬೇಕು ಎಂಬ ಬಗ್ಗೆ ಚರ್ಚಿಸಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಲು ಅಭಿಯಾನ ಕೈಗೊಳ್ಳಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.