ಸುಪ್ರೀಂಕೋರ್ಟ್ ಆದೇಶದಿಂದ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಗಂಡಾಂತರ ಒದಗಿಬಂದಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ಸಿದ್ದವಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯ ಆಧಾರದ ಮೇಲೆ ಹೊಸ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ತಮ್ಮ ಆತಂಕ ಹೊರಹಾಕಿರುವ ಸಿದ್ದರಾಮಯ್ಯನವರು, ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯ ವಿವಾದದ ಇತ್ಯರ್ಥಕ್ಕೆ ಕಾಯದೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶದಿಂದ ಸಾಮಾಜಿಕ ನ್ಯಾಯಕ್ಕೆ ಗಂಡಾಂತರ ಎದುರಾಗಿದೆ. ಇದರಿಂದ ಹಿಂದುಳಿದ ಜಾತಿಗಳು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಲಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಕರ್ನಾಟಕ ರಾಜ್ಯಕ್ಕೂ ಸಂಬಂಧಿಸಿರುವ ಕಾರಣ ರಾಜ್ಯ ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ನ್ಯಾಯಾಲಯದ ಗಮನಕ್ಕೆ ತರಬೇಕು. ಈ ಬಗ್ಗೆ ಮುಂದಿನ ಕ್ರಮದ ಕುರಿತು ಚರ್ಚಿಸಲು ರಾಜ್ಯದ ಮುಖ್ಯಮಂತ್ರಿಗಳು ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಭಿನ್ನವಾಗಿದೆ. ಇಲ್ಲಿ ಈಗಾಗಲೇ ರಾಜ್ಯ ಸರ್ಕಾರ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧವಿದೆ. ಇದರ ಆಧಾರದಲ್ಲಿ ಕಡಿಮೆ ಅವಧಿಯಲ್ಲಿ ಹೊಸ ರಾಜಕೀಯ ಮೀಸಲಾತಿಯನ್ನು ರೂಪಿಸಲು ಸಾಧ್ಯವಿದೆ ಎಂದು ಹೇಳಿದ್ದಾರೆ.