Police Recruitment Scam : ಮರು ಪರೀಕ್ಷೆ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Police Recruitment Exam
Representative Image

ಪಿಎಸ್‌ಐ ನೇಮಕಾತಿ ಅಕ್ರಮದ (Police Recruitment Scam) ಹಿನ್ನೆಲೆಯಲ್ಲಿ 545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಜೊತೆಗೆ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಮರು ಪರೀಕ್ಷೆಗೆ ದಿನಾಂಕ ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿ ಮಧ್ಯಂತರ ಆದೇಶ ಮಾಡಿದೆ. ಇದನ್ನೂ ಓದಿ : PSI Illegal Recruitment Case : ಶೀಘ್ರವೇ ಮರುಪರೀಕ್ಷೆ ದಿನಾಂಕ ಪ್ರಕಟ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪಿಎಸ್‌ಐ ನೇಮಕ ಅಕ್ರಮದ ಕುರಿತ ತನಿಖೆ ಈಗಾಗಲೇ ಪೂರ್ಣಗೊಂಡಿದೆ. 32 ಮಂದಿ ಅಭ್ಯರ್ಥಿಗಳು ಕಳಂಕಿತರು ಎಂದು ಗುರುತಿಸಿರುವ ತನಿಖಾಧಿಕಾರಿಗಳು, ಅವರ ವಿರುದ್ಧ ದೋಷಾರೋಪ ಪಟ್ಟಿಸಹ ದಾಖಲಿಸಿದ್ದಾರೆ. ಹಾಗಾಗಿ, ಕಳಂಕಿತ ಮತ್ತು ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಅವಕಾಶವಿದೆ. ಇದರಿಂದ ಮರು ಪರೀಕ್ಷೆ ನಡೆಸುವ ಅವಶ್ಯಕತೆ ಇಲ್ಲ ಎಂದು ವಾದಿಸಿದರು. ಮರು ಪರೀಕ್ಷೆ ನಡೆಸಿದರೆ ಈಗಾಗಲೇ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಲಿದೆ. ಹಲವು ಅಭ್ಯರ್ಥಿಗಳಿಗೆ ವಯೋಮಿತಿ ಮೀರುತ್ತಿದೆ. ಅವರು ಉದ್ಯೋಗವಕಾಶದಿಂದ ವಂಚಿತರಾಗಲಿದ್ದಾರೆ ಎಂದು ಹೇಳಿದರು.

ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ (Police Recruitment Scam) ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ : PSI Recruitment Scam : ಬಂಧಿತ ಎಡಿಜಿಪಿ ಅಮೃತ್ ಪೌಲ್ ವಿರುದ್ಧ ಚಾರ್ಜ್​ಶಿಟ್ ಸಲ್ಲಿಕೆ