ಬಂಡಾಯ ಶಾಸಕರ ವಿರುದ್ಧ ಶಿವಸೇನಾ ಕಾರ್ಯಕರ್ತರಿಂದ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಂಬೈ ಮಹಾನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಶಿವಸೇನಾದ ಬಂಡಾಯ ಶಾಸಕರು ಥಾಣೆಯಲ್ಲಿ ಇಂದು ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಶಿವಸೇನಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಿದ್ದಾರೆ.
ಈ ಬೆಳವಣಿಗಳ ಹಿನ್ನೆಲೆಯಲ್ಲಿ ಶಿವಸೇನಾ ಕಾರ್ಯಕರ್ತರು ಬೀದಿಗಿಳಿಯುವ ಸಾಧ್ಯತೆ ಇದ್ದು, ಮುಂಬೈ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದಲ್ಲಿ ಸದ್ಯ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ ಪಕ್ಷಗಳನ್ನೊಳಗೊಂಡ ಮಹಾ ವಿಕಾಸ್ ಆಘಾಡಿ ಮೈತ್ರಿಕೂಟ ಅಧಿಕಾರದಲ್ಲಿದೆ. ಸದ್ಯ ಶಿವಸೇನಾದಲ್ಲಿ ಬಿಕ್ಕಟ್ಟು ಬಿಗಡಾಯಿಸಿದ್ದು, ಶಾಸಕ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಅಸ್ಸಾಂನ ಗುವಾಹಟಿಯ ಹೋಟೆಲ್ವೊಂದರಲ್ಲಿ ಬೀಡುಬಿಟ್ಟಿದ್ದಾರೆ.