ಬೆಂಗಳೂರು: ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ. ಇದು ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಹೀಗಾಗಿ ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ರಾಜ್ಯ ಬಿಜೆಪಿಯು ರಾಜ್ಯಪಾಲರ ಕದ ತಟ್ಟಿದೆ. ರಾಜ್ಯಪಾಲರಿಗೆ ಈ ಬಗ್ಗೆ ಮನವಿ ಮಾಡಿದ್ದು, ಮಧ್ಯಪ್ರವೇಶ ಮಾಡುವಂತೆ ಕೇಳಿಕೊಂಡಿದೆ.
ರಾಜಭವನದಲ್ಲಿ ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗವು, ಅಂದು ಬೆಂಗಳೂರಿನ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇರುವುದರಿಂದ ಯಾವುದೇ ಕಾರಣಕ್ಕೂ ರಾಜ್ಯ ಬಜೆಟ್ ಮಂಡನೆ ಮಾಡುವುದು ಸರಿಯಲ್ಲ. ಹೀಗಾಗಿ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ಮನವಿ ಮಾಡಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಚುನಾವಣಾ ಆಯೋಗವು ಬೆಂಗಳೂರಿನ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಚುನಾವಣೆ ನಡೆಯಲಿದೆ ಎಂದು ಜನವರಿ 23ರಂದೇ ಚುನಾವಣಾ ದಿನವನ್ನು ನಿಗದಿಪಡಿಸಿತ್ತು. ಆದರೆ, ಈಗ ಮತದಾನದ ದಿನವೇ ರಾಜ್ಯ ಸರ್ಕಾರ ಬಜೆಟ್ ಮಂಡನೆಗೆ ಮುಂದಾಗಿದೆ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.