ಪಿಎಸ್​ಐ ಕೇಸ್​: ಕಳಂಕರಹಿತರಿಗೆ ಪ್ರತ್ಯೇಕ ಪರೀಕ್ಷೆ ಸಾಧ್ಯವೇ?

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದವರ ಪೈಕಿ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಒಂದು ಪರೀಕ್ಷೆ ನಡೆಸಲು ಸಾಧ್ಯವೇ.. ಹೀಗೆಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಕೇಳಿದೆ.

ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿದ್ದ 7 ಅರ್ಜಿಗಳ ವಿಚಾರಣೆಯನ್ನು ವಿಭಾಗೀಯ ಪೀಠ ನಡೆಸಿತು.

ನ್ಯಾಯಾಲಯದ ಈ ಹಿಂದಿನ ನಿರ್ದೇಶನದಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಂಧಿಸಿದ ತನಿಖಾ ವರದಿಯನ್ನು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು.

ಈ ವರದಿ ಪರಿಶೀಲಿಸಿದ ವಿಭಾಗೀಯ ಪೀಠ ಆರೋಪ ಪಟ್ಟಿಯಲ್ಲಿ ಹೆಸರು ಉಲ್ಲೇಖವಾಗಿರದ ಅಭ್ಯರ್ಥಿಗಳಿಗೆ ಮಾತ್ರ ಒಂದು ಪರೀಕ್ಷೆ ನಡೆಸಿ, ಅದರ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವೇ ಎಂದು ಪ್ರಶ್ನಿಸಿತು. ಈ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಅಡ್ವೊಕೇಟ್‌ ಜನರಲ್‌ಗೆ ಸೂಚಿಸಿ, ವಿಚಾರಣೆಯನ್ನು ಜೂನ್‌ 27ಕ್ಕೆ ಮುಂದೂಡಿತು.