ಪರಿಶಿಷ್ಟರ ಮೀಸಲಾತಿ ಹೆಚ್ಚಳ: ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿಲ್ಲ ಬೊಮ್ಮಾಯಿ ಸರ್ಕಾರ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಹೆಚ್ಚಳವನ್ನು ಸಂವಿಧಾನದ 9ನೇ ವಿಧಿಗೆ ಸೇರಿಸುವ ಸಂಬಂಧ ಕರ್ನಾಟಕ ಸರ್ಕಾರದಿಂದ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಲೋಕಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಎ ನಾರಾಯಣಸ್ವಾಮಿ ಅವರು ಲಿಖಿತ ಉತ್ತರ ನೀಡಿದ್ದಾರೆ.

ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತಂದಿದೆ. ಅದರಂತೆ ಪರಿಶಿಷ್ಟ ಜಾತಿ ಮೀಸಲಾತಿ ಶೇಕಡಾ 15ರಿಂದ ಶೇಕಡಾ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿ ಶೇಕಡಾ 3ರಿಂದ 7ಕ್ಕೆ ಹೆಚ್ಚಳವಾಗಿತ್ತು. ಈ ಮೀಸಲಾತಿ ಹೆಚ್ಚಳದಿಂದ ರಾಜ್ಯದಲ್ಲಿ ಒಟ್ಟಾರೆ ಮೀಸಲಾತಿ ಪ್ರಮಾಣ ಶೇಕಡಾ 56ಕ್ಕೆ ಹೆಚ್ಚಳವಾಗಿತ್ತು.

ಮೀಸಲಾತಿ ಪ್ರಮಾಣ ಶೇಕಡಾ 50ರ ಗಡಿ ಮೀರಿರುವ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಿಕ ರಕ್ಷಣೆ ಕೊಡುವ ಸಲುವಾಗಿ ಸಂವಿಧಾನದ 9ನೇ ವಿಧಿಗೆ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ರಾಜ್ಯ ಸರ್ಕಾರಕ್ಕೆ ಪ್ರತಿಪಕ್ಷಗಳು ಒತ್ತಾಯಿಸಿದ್ದವು.

ಸಂವಿಧಾನದ 9ನೇ ವಿಧಿಯಲ್ಲಿ ಉಲ್ಲೇಖ ಆಗುವ ಅಂಶಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವಂತಿಲ್ಲ. ಈ ಮೂಲಕ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ರಕ್ಷಣೆ ನೀಡಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಬಗ್ಗೆ ಫೆಬ್ರವರಿ 9ರಂದು ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರವಾಗಿತ್ತು.

ಆದರೆ ಪ್ರಸ್ತಾಪವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿಲ್ಲ.