ಸಚಿವ ಸಂಪುಟದಲ್ಲಿ ಹಿರಿಯ ಸಚಿವರು ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳಬಾರದು. ಅವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿರಿಯ ಸಚಿವರು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಒತ್ತಾಯಿಸುತ್ತೇನೆ. ಯಡಿಯೂರಪ್ಪ ಅವರೇ ತಮ್ಮ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಅವರಂತೆ ಎಲ್ಲರೂ ತ್ಯಾಗದ ಮನೋಭಾವನೆ ಬೆಳೆಸಿಕೊಳ್ಳಬೇಕು. ಸಚಿವನಾಗಲು ನನಗೂ ಅರ್ಹತೆ ಇದೆ. ಈ ಹಿಂದೆ ಸಚಿವನಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ ಎಂದು ಹೇಳುವ ಮೂಲಕ ತಾವೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂಬುದನ್ನು ಸ್ಪಷ್ಟಪಡಿಸಿದರು.
ನಮ್ಮ ಸರ್ಕಾರದ ಸಚಿವರು ವಿಧಾನಸೌಧದ ಮೂರನೇ ಮಹಡಿಗೆ ಮಾತ್ರ ಸೀಮಿತವಾಗಬಾರದು. ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತದೆ. ಇನ್ನಾದರೂ ಅವರು ವಿಧಾನಸೌಧ ಬಿಟ್ಟು ಹೊರಬಂದು ಜನರ ಕೆಲಸ ಮಾಡಬೇಕು ಎಂದು ತಮ್ಮದೇ ಸಚಿವರ ವಿರುದ್ಧ ಚಾಟಿ ಬೀಸಿದ್ದಾರೆ.
ಇನ್ನು ಕಾಂಗ್ರೆಸ್ ಬಗ್ಗೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಸಂಘರ್ಷ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.