ವರುಣಾ ಕ್ಷೇತ್ರದಲ್ಲಿ ಚಿತ್ರನಗರಿ ನಿರ್ಮಿಸಿ: ಸಿಎಂ ಸಿದ್ದರಾಮಯ್ಯಗೆ ಚಿತ್ರರಂಗದ ಮನವಿ

ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ನೇತೃತ್ವದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ಕಲಾವಿದರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿತು.

ಬಜೆಟ್ ಮುಗಿದ ನಂತರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಚಿತ್ರನಗರಿ ನಿರ್ಮಾಣಕ್ಕಾಗಿ ಮತ್ತೊಂದು ಸುತ್ತಿನ‌ ಸುದೀರ್ಘ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ನಿಯೋಗವು ಸಲ್ಲಿಸಿದ ಇತರೆ ಮನವಿಗಳ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.

ಚಲಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ ಎನ್.ಸೀತಾರಾಮ್, ಲಿಂಗದೇವರು, ನಂಜುಂಡೇಗೌಡ, ಹಿರಿಯ ನಟ ಶ್ರೀನಿವಾಸ ಮೂರ್ತಿ, ಕಲಾವಿದೆ ವಿಜಯಲಕ್ಷ್ಮಿ ಸಿಂಗ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.