ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮಣಿಪುರದ ಬುಡಕಟ್ಟು ವಿದ್ಯಾರ್ಥಿ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದು ಹಿಂಸಾಚಾರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಮಣಿಪುರ ರಾಜ್ಯ ಸರ್ಕಾರ 5 ದಿನಗಳ ಕಾಲ ರಾಜ್ಯಾದ್ಯಂತ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಶನಿವಾರ ಸಂಜೆ ಮಣಿಪುರದಲ್ಲಿ 3-4 ಮಂದಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಬಿಷ್ಣುಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಮಣಿಪುರ ಸರ್ಕಾರ ತುರ್ತು ಆದೇಶದಲ್ಲಿ 5 ದಿನಗಳ ಕಾಲ ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ.
ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆಯ ಆಯುಕ್ತ ಹೆಚ್. ಜ್ಞಾನ್ ಪ್ರಕಾಶ್ ತಿಳಿಸಿದ್ದಾರೆ.
ಮಣಿಪುರದ ಬುಡಕಟ್ಟು ಪ್ರದೇಶಗಳಿಗೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡುವ ಜಿಲ್ಲಾ ಕೌನ್ಸಿಲ್ ಮಸೂದೆ, 2021 ಅನ್ನು ವಿಧಾನಸಭೆಯಲ್ಲಿ ಮಂಡಿಸಬೇಕು ಎಂದು ವಿದ್ಯಾರ್ಥಿ ಸಂಘಟನೆ ಒತ್ತಾಯಿಸುತ್ತಿವೆ. ಕಳೆದ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಮಣಿಪುರ(ಗುಡ್ಡಗಾಡು ಪ್ರದೇಶಗಳು) ಜಿಲ್ಲಾ ಕೌನ್ಸಿಲ್ 6 ಮತ್ತು 7 ನೇ ತಿದ್ದುಪಡಿ ಮಸೂದೆಗಳನ್ನು ಮಂಡಿಸಿದೆ. ಆದರೆ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳಿಗೆ ಅದು ಅನುಗುಣವಾಗಿಲ್ಲ ಎಂದು ಎಂದು ಹೇಳಿ ಪ್ರತಿಭಟನೆಗೆ ಇಳಿದಿದ್ದಾರೆ.
ಶನಿವಾರ ಇಂಫಾಲದಲ್ಲಿ ನಡೆದ ಪ್ರತಿಭಟನೆಯನ್ನು ಪೊಲೀಸರು ತಡೆಯಲು ಪ್ರಯತ್ನಿಸಿದಾಗ 30 ಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಐವರು ಬುಡಕಟ್ಟು ವಿದ್ಯಾರ್ಥಿ ನಾಯಕರನ್ನು ಬಂಧಿಸಿ 15 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ.